ಕೀರ್ತನೆಗಳು 19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. 1 ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ. 2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು. 3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. 4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ. 5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ. 6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ. 7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. 8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. 9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. 10 ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. 11 ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ. 12 ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು. 13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ. 14 ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ. |
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Bridge Connectivity Solutions Pvt. Ltd.