Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019


ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ
ದಾವೀದನ ಕೀರ್ತನೆ.

1 ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.

2 ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.

3 ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.

4 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.

7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

8 ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.

9 ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.

10 ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.

11 ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.

12 ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.

13 ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

15 ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.

16 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.

17 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.

18 ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.

19 ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.

20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.

21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.

22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.

KAN-IRV

Creative Commons License

Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.

Bridge Connectivity Solutions Pvt. Ltd.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು