Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 86 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019


ಶತ್ರಪೀಡಿತನ ವಿಜ್ಞಾಪನೆ
ಕೀರ್ತ 25
ದಾವೀದನ ಕೀರ್ತನೆ.

1 ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.

2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.

3 ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.

4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.

5 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.

6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.

7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.

8 ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.

9 ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.

10 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.

12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.

13 ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.

14 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.

15 ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.

16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.

17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.

KAN-IRV

Creative Commons License

Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.

Bridge Connectivity Solutions Pvt. Ltd.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು