Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಮತ್ತಾಯ 7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019


ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ

1 “ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.

2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

3 “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?

4 ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.

5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.

6 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಫಲದಾಯಕ ಪ್ರಾರ್ಥನೆ

7 “ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;

8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.

9 “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?

10 ಮೀನು ಕೇಳಿದರೆ ಹಾವನ್ನು ಕೊಡುವನೋ?

11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?

12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.


ವಿನಾಶದ ಬಾಗಿಲು ವಿಶಾಲ

13 “ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.

14 ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ

15 “ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.

16 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?

17 ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;

18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.

19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.

20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.


ಕಪಟಿಗಳಿಗೆ ದೊರೆಯುವ ತೀರ್ಪು

21 “ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.

22 ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.

23 ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ಸ್ಥಿರವಾದ ಮನೆ

24 “ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.

25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.

27 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.

28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

KAN-IRV

Creative Commons License

Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.

Bridge Connectivity Solutions Pvt. Ltd.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು