Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

1 ಕೊರಿಂಥದವರಿಗೆ 15 - ಕನ್ನಡ ಸತ್ಯವೇದವು C.L. Bible (BSI)


ಪುನರುತ್ಥಾನದ ಪ್ರಮಾಣ

1 ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.

2 ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.

3 ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.

4 ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.

5 ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.

6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.

7 ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು.

8 ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.

9 ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.

10 ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.

11 ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.


ಪುನರುತ್ಥಾನದ ಫಲ

12 ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?

13 ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು.

14 ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.

15 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.

16 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು.

17 ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ;

18 ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.

19 ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.

20 ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.

21 ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ಥಾನವು ಪರಿಣಮಿಸಿತು.

22 ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.

23 ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.

24 ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.

25 ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.

26 ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ.

27 “ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.

28 ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.

29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?

30 ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ?

31 ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.

32 ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.

33 ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”

34 ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಪುನರುತ್ಥಾನದ ಪರಿಣಾಮ

35 ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.

36 ಮತಿಹೀನನೇ, ನೀನು ಬಿತ್ತಿದ ಬೀಜ ಸಾಯದಿದ್ದರೆ ಅದು ಜೀವ ತಾಳುವುದುಂಟೆ? ಇಲ್ಲ.

37 ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ.

38 ದೇವರು ತಮ್ಮ ಚಿತ್ತಾನುಸಾರ ಅದಕ್ಕೆ ದೇಹಾಕೃತಿಯನ್ನು ಕೊಡುತ್ತಾರೆ. ಒಂದೊಂದು ಬೀಜಕ್ಕೂ ಅದರದರ ದೇಹಾಕೃತಿಯನ್ನು ಕೊಡುತ್ತಾರೆ.

39 ಎಲ್ಲಾ ಶರೀರಗಳು ಒಂದೇ ವಿಧವಾಗಿಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳ ಶರೀರ ಬೇರೆ.

40 ಸ್ವರ್ಗೀಯ ಶರೀರಗಳೂ ಇವೆ. ಪೃಥ್ವಿಯ ಶರೀರಗಳೂ ಇವೆ. ಆದರೆ ಒಂದರ ಸ್ವರೂಪ ಮತ್ತೊಂದರಂತೆ ಇಲ್ಲ.

41 ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.

42 ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.

43 ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು.

44 ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ.

45 ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.

46 ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು.

47 ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.

48 ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ.

49 ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.

50 ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.

51-52 ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.

53 ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು.

54 ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:

55 ಸಾವಿಗೆ ಸೋಲಾಯಿತು, ಜಯವು ಸಂಪೂರ್ಣವಾಯಿತು. ಎಲೈ ಸಾವೇ, ನಿನ್ನ ಜಯವೆಲ್ಲಿ? ಎಲೈ ಸಾವೇ, ನಿನ್ನ ವಿಷಕೊಂಡಿಯೆಲ್ಲಿ?

56 ಪಾಪವೇ ಸಾವಿನ ವಿಷಕೊಂಡಿ. ಪಾಪಕ್ಕೆ ಶಕ್ತ್ಯಾಧಾರ ಶಾಸ್ತ್ರವಿಧಿಗಳೇ.

57 ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!

58 ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು