1 ಥೆಸಲೋನಿಕದವರಿಗೆ 1 - ಕನ್ನಡ ಸತ್ಯವೇದವು C.L. Bible (BSI)ಪೀಠಿಕೆ 1 ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ! ವಿಶ್ವಾಸಮಯ ಜೀವನ 2 ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. 3 ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ. 4 ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು. 5 ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ. 6 ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ. 7 ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ. 8 ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ. 9 ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ; 10 ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India