1 ಯೋಹಾನನು 4 - ಕನ್ನಡ ಸತ್ಯವೇದವು C.L. Bible (BSI)ಸತ್ಯಾತ್ಮ - ದುರಾತ್ಮ 1 ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ. 2 ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು. 3 ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ. 4 ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ. 5 ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ. 6 ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ. ದೇವರು ಪ್ರೀತಿಸ್ವರೂಪಿ 7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. 8 ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ. 9 ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. 10 ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ. 11 ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು. 12 ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. 13 ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ. 14 ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ. 15 ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ. 16 ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. 17 ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. 18 ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. 19 ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ. 20 ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು? 21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India