2 ತಿಮೊಥೆಯನಿಗೆ 4 - ಕನ್ನಡ ಸತ್ಯವೇದವು C.L. Bible (BSI)1 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ: 2 ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು. 3 ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ. 4 ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ. 5 ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು. 6 ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. 7 ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. 8 ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ವೈಯಕ್ತಿಕ ಹಿತನುಡಿಗಳು 9 ನನ್ನ ಬಳಿಗೆ ಸಾಧ್ಯವಾದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನಿಸು. 10 ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ. 11 ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ. 12 ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ. 13 ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ. 14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು. 15 ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ. 16 ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ. 17 ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. 18 ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್. ಶುಭಾಶಯಗಳು 19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ನನ್ನ ಶುಭಾಶಯಗಳನ್ನು ತಿಳಿಸು. 20 ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ತ್ರೊಫಿಮನನ್ನು ಅನಾರೋಗ್ಯದ ನಿಮಿತ್ತ ಮಿಲೇತದಲ್ಲಿಯೇ ಬಿಟ್ಟಿದ್ದೇನೆ. 21 ಚಳಿಗಾಲಕ್ಕೆ ಮೊದಲೇ ಇಲ್ಲಿಗೆ ಬರಲು ಪ್ರಯತ್ನಿಸು. ಯುಬೂಲ, ಫುದೇಯ, ಲೀನ, ಕ್ಲೌದ್ಯ ಇವರು ಮತ್ತು ಇತರ ಸಹೋದರರು ನಿನಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. 22 ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ! |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India