ಅಪೊಸ್ತಲರ ಕೃತ್ಯಗಳು 15 - ಕನ್ನಡ ಸತ್ಯವೇದವು C.L. Bible (BSI)ಜೆರುಸಲೇಮಿನಲ್ಲಿ ಸಮ್ಮೇಳನ 1 ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು. 2 ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. 3 ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. 4 ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು. 5 ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು. 6 ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು. 7 ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ. 8 ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. 9 ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು. 10 ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ? 11 ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.” 12 ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು. 13 ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ, 14 ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ. 15 ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣಸಾಮರಸ್ಯವಿದೆ. 16 ‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು. 17 ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು 18 ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’ 19 “ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು. 20 ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು. 21 ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು. ಪ್ರೇಷಿತರ ಪರಿಪತ್ರ 22 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. 23 “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! 24 ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ. 25 ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು. 26 ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. 27 ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. 28-29 ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!” 30 ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. 31 ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು. 32 ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು. 33 ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು. 34 ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು. 35 ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು. ಪೌಲನ ಧರ್ಮಪರ್ಯಟನ ಪೌಲ ಬಾರ್ನಬರ ನಡುವೆ ಭಿನ್ನಾಭಿಪ್ರಾಯ 36 ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು. 37 ಮಾರ್ಕನೆಂದು ಹೆಸರುಗೊಂಡ ಯೊವಾನ್ನನನ್ನು ತಮ್ಮ ಸಂಗಡ ಕರೆದುಕೊಂಡು ಹೋಗಬೇಕೆಂಬುದು ಬಾರ್ನಬನ ಇಷ್ಟವಾಗಿತ್ತು. 38 ಆದರೆ ಪಾಂಫೀಲಿಯದಲ್ಲಿ ಇದ್ದಾಗ ಧರ್ಮಪ್ರಚಾರ ಕಾರ್ಯದಲ್ಲಿ ಸಹಕರಿಸದೆ ತಮ್ಮನ್ನು ಬಿಟ್ಟಗಲಿದ ಅವನನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವುದು ಉಚಿತವಲ್ಲವೆಂಬುದು ಪೌಲನ ಅಭಿಪ್ರಾಯ. 39 ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು. 40 ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು. 41 ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India