ಎಫೆಸದವರಿಗೆ 1 - ಕನ್ನಡ ಸತ್ಯವೇದವು C.L. Bible (BSI)ಪೀಠಿಕೆ 1 ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ. 2 ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ! ದೇವರ ಕೃಪಾವರ 3 ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. 4 ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. 5 ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. 6 ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. 7-8 ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ. 9 ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. 10 ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ: 11 ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. 12 ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು. 13 ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ. 14 ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ. ಭರವಸೆಯ ಭಾಗ್ಯ 15-16 ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ. 17 ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. 18 ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. 19 ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. 20-21 ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. 22 ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. 23 ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India