ಕೀರ್ತನೆಗಳು 24 - ಕನ್ನಡ ಸತ್ಯವೇದವು C.L. Bible (BSI)ಮಹಾರಾಜನ ಆಗಮನ 1 ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II 2 ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II 3 ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II 4 ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II 5 ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II 6 ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II 7 ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II 8 ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II 9 ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II 10 ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India