ಕೀರ್ತನೆಗಳು 34 - ಕನ್ನಡ ಸತ್ಯವೇದವು C.L. Bible (BSI)ಪ್ರಭುವಿನಭಿಮಾನ 1 ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II 2 ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I 3 ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II 4 ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II 5 ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II 6 ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II 7 ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II 8 ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II 9 ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II 10 ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II 11 ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II 12 ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II 13 ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II 14 ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II 15 ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II 16 ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II 17 ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II 18 ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II 19 ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II 20 ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II 21 ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II 22 ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India