Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 96 - ಕನ್ನಡ ಸತ್ಯವೇದವು C.L. Bible (BSI)


ವಿಶ್ವದೊಡೆಯನು ಸ್ತುತ್ಯರ್ಹನು
( ೧ ಪೂರ್ವ. 16:23-33 )

1 ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II

2 ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II

3 ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II

4 ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II

5 ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II

6 ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II

7 ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II

8 ಆತನ ನಾಮಕೆ ತನ್ನಿ ಘನತೆಗೌರವವನು I ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು II

9 ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I

10 ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II

11 ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು I ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು II

12 ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II

13 ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು