ಕೀರ್ತನೆಗಳು 97 - ಕನ್ನಡ ಸತ್ಯವೇದವು C.L. Bible (BSI)ಪ್ರಭುವಿನದೇ ಪರಮೋನ್ನತ ರಾಜ್ಯಾಧಿಕಾರ 1 ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II 2 ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II 3 ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II 4 ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II 5 ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II 6 ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II 7 ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II 8 ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II 9 ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II 10 ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II 11 ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II 12 ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India