Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೊಲೊಸ್ಸೆಯವರಿಗೆ 3 - ಕನ್ನಡ ಸತ್ಯವೇದವು C.L. Bible (BSI)


ಕ್ರೈಸ್ತ ಜೀವನ

1 ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.

2-3 ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.

4 ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


ಸದ್ಗುಣಗಳೇ ಸ್ಥಿರಾಭರಣಗಳು

5 ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.

6 ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.

7 ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದೀರಿ.

8 ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.

9 ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.

10 ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.

11 ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.

12 ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.

13 ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.

14 ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.

15 ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.

16 ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.

17 ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಸಂಸಾರದಲ್ಲಿ ಸಾಮರಸ್ಯ

18 ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.

19 ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಅವರೊಡನೆ ಕಠಿಣವಾಗಿ ವರ್ತಿಸದಿರಿ.

20 ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ. ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ.

21 ತಂದೆತಾಯಿಯರೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನಕುಗ್ಗಿಸದಿರಿ.

22 ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.

23 ನೀವು ಏನನ್ನು ಮಾಡಿದರೂ ಪೂರ್ಣಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ.

24 ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.

25 ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು