ಮತ್ತಾಯ 11 - ಕನ್ನಡ ಸತ್ಯವೇದವು C.L. Bible (BSI)ಪುರುಷೋತ್ತಮನಾದ ಸ್ನಾನಿಕ ಯೊವಾನ್ನ ( ಮಾರ್ಕ. 7:18-35 ) 1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು. 2 ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು. 3 ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?" ಎಂದು ಯೇಸುವನ್ನು ಕೇಳಿದರು. 4 ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ. 5 ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. 6 ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು. 7 ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ? 8 ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. 9 ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ. 10 ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ. 11 ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ. 12 ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. 13 ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು. 14 ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ. 15 ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. 16 “ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ? 17 ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ,” ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ. 18 ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು. 19 ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು. ಪಾಪಕ್ಕೆ ವಿಮುಖವಾಗದ ಪಟ್ಟಣಗಳಿಗೆ ಶಾಪ ( ಲೂಕ. 10:13-15 ) 20 ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು; 21 :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು. 22 ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. 23 ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. 24 ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು. ಸುಪ್ರೀತ ಸಂಕಲ್ಪ ( ಲೂಕ. 10:21-22 ) 25 ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. 26 ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. 27 “ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು. ಶ್ರಮಜೀವಿಗಳಿಗೆ ವಿಶ್ರಾಂತಿದಾತ 28 “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. 29 ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. 30 ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India