ಮತ್ತಾಯ 19 - ಕನ್ನಡ ಸತ್ಯವೇದವು C.L. Bible (BSI)ವಿವಾಹ ವಿಚ್ಛೇದನೆ ಕೂಡದು ( ಮಾರ್ಕ. 10:1-12 ) 1 ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. 2 ದೊಡ್ಡ ಜನಸ್ತೋಮ ಅವರನ್ನು ಹಿಂಬಾಲಿಸಿತು. ಅಲ್ಲಿ ಯೇಸು ಅವರಿಗೆ ಆರೋಗ್ಯದಾನ ಮಾಡಿದರು. 3 ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. 4 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ, 5 ‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೇ? 6 ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು. 7 "ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು. 8 “ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ. 9 ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.” ಬ್ರಹ್ಮಚರ್ಯೆಗೆ ಕರೆ 10 ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು. 11 ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ. 12 ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು. ಪುಟಾಣಿಗಳಿಗೆ ಪುರಸ್ಕಾರ ( ಮಾರ್ಕ. 10:13-16 ; ಲೂಕ. 18:15-17 ) 13 ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು. 14 ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು. 15 ತರುವಾಯ ಆ ಮಕ್ಕಳ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟುಹೋದರು. ಧನಿಕ ಯುವಕನ ಸಮಸ್ಯೆ ( ಮಾರ್ಕ. 10:17-31 ; ಲೂಕ. 18:18-30 ) 16 ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು. 17 ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು. 18 “ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು 19 ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು. 20 ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ. 21 ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. 22 ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು. 23 ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ. 24 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು. 25 ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು. 26 ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು. ಪರಿತ್ಯಾಗದ ನೂರ್ಮಡಿ ಪ್ರತಿಫಲ 27 ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನು. 28 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. 29 ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು. 30 ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India