Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಮತ್ತಾಯ 25 - ಕನ್ನಡ ಸತ್ಯವೇದವು C.L. Bible (BSI)


ಹತ್ತುಮಂದಿ ಕನ್ಯೆಯರ ಸಾಮತಿ
( ಮಾರ್ಕ. 13:33-37 ; ಲೂಕ. 12:35-38 )

1 “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.

2 ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.

3 ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.

4 ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

5 ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.

6 “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.

7 ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.

8 ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.

9 ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.

10 ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.

11 ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.

12 ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.

13 ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ದೇವರು ಕೊಡುವುದು ಬಚ್ಚಿಡುವುದಕ್ಕಲ್ಲ
( ಲೂಕ. 19:11-27 )

14 “ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.

15 ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.

16 ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.

17 ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.

18 ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ.

19 ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ.

20 ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.

21 ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.

22 ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.

23 ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.

24 ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;

25 ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.

26 “ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?

27 ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.

28 ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ.

29 ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.

30 ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.


ಪರರ ಸೇವೆಯೇ ಪರಮಾತ್ಮನ ಸೇವೆ

31 “ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.

32 ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.

33 ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು.

34 ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.

35 ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ.

36 ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.

37 ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು?

38 ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು?

39 ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು.

40 ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.

41 “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

42 ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;

43 ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.

44 ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.

45 ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.

46 “ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು