Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಮತ್ತಾಯ 7 - ಕನ್ನಡ ಸತ್ಯವೇದವು C.L. Bible (BSI)


“ಲೋಕದ ಡೊಂಕ ನೀವೇಕೆ ತಿದ್ದುವಿರಿ?”
( ಲೂಕ. 6:37-38 , 41-42 )

1 “ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.

2 ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.

3 ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?

4 ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?

5 ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”

6 “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಫಲದಾಯಕ ಪ್ರಾರ್ಥನೆ
( ಲೂಕ. 11:9-13 )

7 “ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.

8 ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.

9 ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?

10 ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು?

11 ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”


ಸುವರ್ಣ ಸೂತ್ರ

12 “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


ವಿನಾಶಕ್ಕೆ ಒಯ್ಯುವ ವೀದಿ ವಿಶಾಲ
( ಲೂಕ. 13:24 )

13 “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.

14 ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”


ಸುಳ್ಳುಪ್ರವಾದಿಗಳಿದ್ದಾರೆ, ಜಾಗ್ರತೆ!
( ಲೂಕ. 6:43-44 )

15 “ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.

16 ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?

17 ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.

18 ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು.

19 ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.

20 ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ.”


ನುಡಿದಂತೆ ನಡೆ
( ಲೂಕ. 13:25-27 )

21 “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.

22 ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.

23 ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ಉಸುಬು ಮೇಲಿನ ಮನೆ ಕುಸಿದು ಬಿತ್ತು
( ಲೂಕ. 6:47-49 )

24 “ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.

25 ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.

26 ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.

27 ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಬೋಧನೆಯ ಪ್ರಭಾವ

28 ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.

29 ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು