ಮತ್ತಾಯ 9 - ಕನ್ನಡ ಸತ್ಯವೇದವು C.L. Bible (BSI)ಪಾಪವಿಮೋಚನೆ ಯಾರಿಂದ ಸಾಧ್ಯ? ( ಮಾರ್ಕ. 2:1-12 ; ಲೂಕ. 5:17-26 ) 1 ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು. 2 ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. 3 ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು. 4 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? 5 ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ? 6 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು. 7 ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು. 8 ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು. ಸಮಾಜದಿಂದ ಬಹಿಷ್ಕೃತ - ಯೇಸುವಿನಿಂದ ಸ್ವೀಕೃತ ( ಮಾರ್ಕ. 2:13-17 ; ಲೂಕ. 5:27-32 ) 9 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು. 10 ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. 11 ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು. 12 ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ. 13 ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು. ಹಳೆ ಬಟ್ಟೆಗೆ ಹೊಸ ತೇಪೆಯೇ? ( ಮಾರ್ಕ. 2:18-22 ; ಲೂಕ. 5:33-39 ) 14 ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು. 15 ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು. 16 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. 17 ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು. ಸಾವುನೋವುಗಳ ನಿವಾರಕ ( ಮಾರ್ಕ. 5:21-43 ; ಲೂಕ. 8:40-56 ) 18 ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು. 19 ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು. 20 ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. 21 ‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ. 22 ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. 23 ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, 24 “ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು. 25 ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು. 26 ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು. ಅಂಧರಿಗೆ ದೃಷ್ಟಿದಾನ 27 ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು. 28 ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು. 29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು. 30 ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. 31 ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು. ಮೂಕನಿಗೆ ವಾಕ್‍ಶಕ್ತಿಯ ದಾನ 32 ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. 33 ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು. 34 ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ದಯಾಮಯ ಯೇಸು 35 ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು. 36 ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. 37 ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. 38 ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India