Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಮಾರ್ಕ 2 - ಕನ್ನಡ ಸತ್ಯವೇದವು C.L. Bible (BSI)


ಪಾಪವಿಮೋಚಕ ಯೇಸು
( ಮತ್ತಾ. 9:1-8 ; ಲೂಕ. 5:17-26 )

1 ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.

2 ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.

3 ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು.

4 ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

5 ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.

6-7 ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.

8 ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?

9 ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?

10 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ,

11 “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.

12 ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ಸುಂಕದ ಇಲಾಖೆಯಿಂದ ಶಿಷ್ಯನ ಆಯ್ಕೆ
( ಮತ್ತಾ. 9:9-13 ; ಲೂಕ. 5:27-32 )

13 ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು.

14 ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು.

15 ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.

16 ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.

17 ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಮದುವೆಯಲ್ಲಿ ಉಪವಾಸವೆ?
( ಮತ್ತಾ. 9:14-17 ; ಲೂಕ. 5:33-39 )

18 ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತಗಳನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ” ಎಂದು ಕೇಳಿದರು.

19 ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು.

20 ಮದುವಣಿಗನು ಅವರಿಂದ ಅಗಲಬೇಕಾದ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು.

21 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

22 ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.


ಯೇಸು ಸಬ್ಬತ್ತಿಗೂ ಒಡೆಯ
( ಮತ್ತಾ. 12:1-8 ; ಲೂಕ. 6:1-5 )

23 ಅದೊಂದು ಸಬ್ಬತ್‍ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದುಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು.

24 ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.

25 ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?

26 ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.

27 ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.

28 ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು