ಯೆಶಾಯ 35 - ಕನ್ನಡ ಸತ್ಯವೇದವು C.L. Bible (BSI)ಸಿಯೋನಿಗೆ ಸಿಗುವ ಸೌಭಾಗ್ಯ 1 ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು. 2 ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು. 3 ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ. 4 ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.” 5 ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ. 6 ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ. 7 ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು. 8 ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು. 9 ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ. 10 ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India