Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಯೆಶಾಯ 55 - ಕನ್ನಡ ಸತ್ಯವೇದವು C.L. Bible (BSI)


ಕರುಣೆಯ ಕರೆ

1 ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.

2 ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.

3 ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.

4 ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.

5 ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.

6 ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.

7 ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.

8 “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.

9 “ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.

10 ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.

11 ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.

12 ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.

13 ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”

Kannada C.L. Bible - ಸತ್ಯವೇದವು C.L.

Copyright © 2016 by The Bible Society of India

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು