ಯೋನನು 3 - ಕನ್ನಡ ಸತ್ಯವೇದವು C.L. Bible (BSI)ಯೋನನ ವಿಧೇಯತೆ - ಜನರ ಮನಃಪರಿವರ್ತನೆ 1 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: 2 “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು. 3 ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. 4 ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು. 5 ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು. 6 ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು. 7 ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು. 8 ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು. 9 ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.” 10 ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು. |
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.
Bible Society of India