Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

1 ಕೊರಿಂಥದವರಿಗೆ 13 - ಕನ್ನಡ ಸತ್ಯವೇದವು J.V. (BSI)


ಪ್ರೀತಿಯ ಶ್ರೇಷ್ಠತೆ

1 ನಾನು ಮನುಷ್ಯರ ಭಾಷೆಗಳನ್ನೂ ದೇವದೂತರ ಭಾಷೆಗಳನ್ನೂ ಆಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.

2 ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.

3 ನನಗಿರುವದೆಲ್ಲವನ್ನು ಅನ್ನದಾನಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.

4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;

5 ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ;

6 ಅನ್ಯಾಯವನ್ನು ನೋಡಿ ಸಂತೋಷಪಡದೆ ಸತ್ಯಕ್ಕೆ ಜಯವಾಗುವಲ್ಲಿ ಸಂತೋಷಪಡುತ್ತದೆ;

7 ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ.

8 ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.

9 ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.

10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.

11 ನಾನು ಬಾಲಕನಾಗಿದ್ದಾಗ ಬಾಲಕನ ಮಾತುಗಳನ್ನಾಡಿದೆನು, ಬಾಲಕನ ಸುಖ ದುಃಖಗಳನ್ನು ಅನುಭವಿಸಿದೆನು, ಬಾಲಕನ ಆಲೋಚನೆಗಳನ್ನು ಮಾಡಿಕೊಂಡೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.

12 ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.

13 ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.

Kannada J.V. Bible © The Bible Society of India, 2016.

Used by permission. All rights reserved worldwide.

Bible Society of India
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು