ಮತ್ತಾಯ 6 - ಕನ್ನಡ ಸತ್ಯವೇದವು J.V. (BSI)1 ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು. 2 ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3 ನೀನಾದರೆ ಧರ್ಮಕೊಡುವಾಗ ನೀನು ಧರ್ಮಕೊಟ್ಟದ್ದು ಅಂತರಂಗವಾಗುವ ಹಾಗೆ ನಿನ್ನ ಬಲಗೈ ಮಾಡಿದ್ದು ಎಡಗೈಗೂ ತಿಳಿಯದಿರಲಿ. 4 ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 5 ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 6 ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 7 ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ. 8 ಆದದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವದಕ್ಕಿಂತ ಮುಂಚೆಯೇ ನಿಮಗೆ ಏನೇನು ಅಗತ್ಯವೆಂಬದು ಆತನಿಗೆ ತಿಳಿದದೆ. 9 ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು - 10 ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. 11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು. 12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು. 13 ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು. 14 ನೀವು ಜನರ ತಪ್ಪುಗಳನ್ನು ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷವಿುಸುವನು. 15 ಆದರೆ ನೀವು ಜನರ ತಪ್ಪುಗಳನ್ನು ಕ್ಷವಿುಸದೆಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷವಿುಸುವದಿಲ್ಲ. 16 ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 17 ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳಕೋ. 18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 19 ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. 20 ಆದರೆ ಪರಲೋಕದಲ್ಲಿ ಗಂಟು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವದೂ ಇಲ್ಲ, ಕದಿಯುವದೂ ಇಲ್ಲ. 21 ನಿನ್ನ ಗಂಟು ಇದ್ದಲ್ಲಿಯೇ ನಿನ್ನ ಮನಸ್ಸೂ ಇರುವದಷ್ಟೆ. 22 ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು. 23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು! 24 ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ. 25 ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ. 26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? 27 ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು? 28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ; 29 ಆದಾಗ್ಯೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. 30 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ. 31 ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ. 32 ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ. 33 ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. 34 ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು. |
Kannada J.V. Bible © The Bible Society of India, 2016.
Used by permission. All rights reserved worldwide.
Bible Society of India