Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಜ್ಞಾನೋಕ್ತಿಗಳು 13 - ಕನ್ನಡ ಸಮಕಾಲಿಕ ಅನುವಾದ

1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.

2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.

3 ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.

4 ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.

5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.

6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.

7 ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.

8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.

9 ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.

10 ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.

11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.

12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.

13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.

14 ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.

15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.

16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.

17 ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.

18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.

19 ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.

20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.

21 ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.

22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.

23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.

24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.

25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.

ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™

ಕೃತಿಸ್ವಾಮ್ಯ © 1999, 2020, 2022 Biblica, Inc.

ಅನುಮತಿಯೊಂದಿಗೆ ಬಳಸಲಾಗಿದೆ

ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

Holy Bible, Kannada Contemporary Version™

Copyright © 1999, 2020, 2022 by Biblica, Inc.

Used with permission. All rights reserved worldwide.

Biblica, Inc.
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು