ಕೀರ್ತನೆಗಳು 26 - ಪರಿಶುದ್ದ ಬೈಬಲ್ರಚನೆಗಾರ: ದಾವೀದ. 1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು. 2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು. 3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು. 4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ. 5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ. 6 ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ. 7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು. 8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ. 9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ. 10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು. 11 ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು. 12 ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು. |
Kannada Holy Bible: Easy-to-Read Version
All rights reserved.
© 1997 Bible League International
Bible League International