ಕೀರ್ತನೆಗಳು 4 - ಪರಿಶುದ್ದ ಬೈಬಲ್ರಚನೆಗಾರ: ದಾವೀದ. 1 ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು. 2 ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ? 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ. 4 ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ. 5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ! 6 “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು. 7 ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ. 8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ. |
Kannada Holy Bible: Easy-to-Read Version
All rights reserved.
© 1997 Bible League International
Bible League International