Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ಕೀರ್ತನೆಗಳು 44 - ಪರಿಶುದ್ದ ಬೈಬಲ್‌


ರಚನೆಗಾರರು: ಕೋರಹೀಯರು.

1 ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.

2 ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.

3 ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.

4 ನನ್ನ ದೇವರೇ, ನೀನೇ ನನ್ನ ರಾಜನು. ಆಜ್ಞಾಪಿಸಿ ಯಾಕೋಬನಿಗೆ ಜಯವನ್ನು ದಯಪಾಲಿಸು.

5 ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.

6 ನನ್ನ ಬಿಲ್ಲುಬಾಣಗಳಲ್ಲಿ ನಾನು ಭರವಸೆವಿಡುವುದಿಲ್ಲ. ನನ್ನ ಖಡ್ಗವು ನನ್ನನ್ನು ರಕ್ಷಿಸಲಾರದು.

7 ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ.

8 ದಿನವೆಲ್ಲಾ ದೇವರನ್ನು ಕೊಂಡಾಡಿದೆವು. ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು.

9 ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.

10 ನಮ್ಮ ವೈರಿಗಳು ನಮ್ಮನ್ನು ಹಿಂದಟ್ಟುವಂತೆ ಮಾಡಿದೆ. ನಮ್ಮ ವೈರಿಗಳು ನಮ್ಮ ಐಶ್ವರ್ಯವನ್ನು ತೆಗೆದುಕೊಂಡರು.

11 ಕೊಯ್ಯಲ್ಪಡುವ ಕುರಿಗಳೋ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.

12 ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.

13 ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.

14 ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ.

15 ನಾಚಿಕೆಯು ನನ್ನನ್ನು ಕವಿದುಕೊಂಡಿದೆ. ಅವಮಾನವು ದಿವವೆಲ್ಲಾ ನನ್ನೆದುರಿನಲ್ಲೇ ಇದೆ.

16 ನನ್ನ ವೈರಿಗಳ ಮತ್ತು ದೂಷಕರ ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ.

17 ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.

18 ನಾವು ನಿನಗೆ ವಿಮುಖರಾಗದೆ ನಿನ್ನನ್ನೇ ಹಿಂಬಾಲಿಸಿದೆವು.

19 ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.

20 ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟೆವೋ? ಅನ್ಯದೇವರುಗಳಿಗೆ ನಾವು ಪ್ರಾರ್ಥಿಸಿದೆವೋ? ಇಲ್ಲ!

21 ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.

22 ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.

23 ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.

24 ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ?

25 ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ.

26 ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು