ಕೀರ್ತನೆಗಳು 6 - ಪರಿಶುದ್ದ ಬೈಬಲ್ರಚನೆಗಾರ: ದಾವೀದ. 1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. 3 ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು? 4 ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು. 5 ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು. 6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. 7 ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ. 8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು. 10 ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು. |
Kannada Holy Bible: Easy-to-Read Version
All rights reserved.
© 1997 Bible League International
Bible League International