ಕೀರ್ತನೆಗಳು 61 - ಪರಿಶುದ್ದ ಬೈಬಲ್ರಚನೆಗಾರ: ದಾವೀದ. 1 ದೇವರೇ, ನನ್ನ ಮೊರೆಯನ್ನು ಕೇಳು. ನನ್ನ ಪ್ರಾರ್ಥನೆಗೆ ಕಿವಿಗೊಡು. 2 ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು. 3 ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು. 4 ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ. 5 ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ. ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ. 6 ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು. ಅವನು ಸದಾಕಾಲ ಜೀವಿಸಲಿ! 7 ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು. 8 ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು. |
Kannada Holy Bible: Easy-to-Read Version
All rights reserved.
© 1997 Bible League International
Bible League International