ಕೀರ್ತನೆಗಳು 97 - ಪರಿಶುದ್ದ ಬೈಬಲ್1 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ. 2 ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ. 3 ಬೆಂಕಿಯು ಆತನ ಮುಂದೆ ಹೋಗಿ ಆತನ ಶತ್ರುಗಳನ್ನು ನಾಶಮಾಡುವುದು. 4 ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ. ಜನರು ಅದನ್ನು ನೋಡಿ ಭಯಗೊಂಡಿದ್ದಾರೆ. 5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ. 6 ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ! ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ! 7 ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ. 8 ಚೀಯೋನೇ, ಕೇಳಿ ಸಂತೋಷಪಡು! ಯೆಹೂದದ ಪಟ್ಟಣಗಳೇ, ಆನಂದಿಸಿರಿ. ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ. 9 ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು. 10 ಯೆಹೋವನನ್ನು ಪ್ರೀತಿಸುವವರೇ, ದುಷ್ಟತನವನ್ನು ದ್ವೇಷಿಸಿರಿ. ದೇವರು ತನ್ನ ಭಕ್ತರನ್ನು ಸಂರಕ್ಷಿಸುವನು. ದೇವರು ತನ್ನ ಸದ್ಭಕ್ತರನ್ನು ಕೆಡುಕರಿಂದ ರಕ್ಷಿಸುವನು. 11 ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ. 12 ನೀತಿವಂತರೇ, ಯೆಹೋವನಲ್ಲಿ ಸಂತೋಷಪಡಿರಿ! ಆತನ ಪವಿತ್ರ ಹೆಸರನ್ನು ಸನ್ಮಾನಿಸಿರಿ! |
Kannada Holy Bible: Easy-to-Read Version
All rights reserved.
© 1997 Bible League International
Bible League International