ಪ್ರಕಟನೆ 15 - ಪರಿಶುದ್ದ ಬೈಬಲ್ದೇವದೂತರಿಂದ ಕೊನೆಯ ಉಪದ್ರವಗಳು 1 ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು. 2 ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು. 3 ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. 4 ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.” 5 ಇದಾದ ನಂತರ ನಾನು ನೋಡಿದಾಗ ಪರಲೋಕದ ಆಲಯವು (ದೇವದರ್ಶನ ಗುಡಾರವು) ತೆರೆಯಿತು. 6 ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು. 7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು. 8 ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ. |
Kannada Holy Bible: Easy-to-Read Version
All rights reserved.
© 1997 Bible League International
Bible League International