Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -

ವಿಮೋಚನಕಾಂಡ 24 - ಪರಿಶುದ್ದ ಬೈಬಲ್‌


ದೇವರ ಮತ್ತು ಇಸ್ರೇಲರ ನಡುವೆ ಒಡಂಬಡಿಕೆ

1 ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.

2 ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು.

3 ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.

4 ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.

5 ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.

6 ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.

7 ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.

8 ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.

9 ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.

10 ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!

11 ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಯೆಹೋವನ ನಿಬಂಧನೆಯನ್ನು ಪಡೆಯಲು ಮೋಶೆ ಹೋದದ್ದು

12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.

13 ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು.

14 ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.


ಮೋಶೆಯು ದೇವರನ್ನು ಭೇಟಿಯಾದದ್ದು

15 ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು.

16 ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.

17 ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.

18 ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.

Kannada Holy Bible: Easy-to-Read Version

All rights reserved.

© 1997 Bible League International

Bible League International
ನಮ್ಮನ್ನು ಅನುಸರಿಸಿ:



ಜಾಹೀರಾತುಗಳು