ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.
ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.