ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.